
ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ದಿ ವಿಷಯಗಳ ಕುರಿತು ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ಮಾಡಿ, ಚರ್ಚಿಸಿದ್ದು, ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೊಳಿಸುವಂತೆ ಮನವಿ ಮಾಡಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.
ಬಹು ಮುಖ್ಯವಾಗಿ ಸುಮಾರು 700 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಸೊರಬ ತಾಲೂಕಿನ 331 ಗ್ರಾಮಗಳು ಹಾಗೂ ಸೊರಬ, ಶಿರಾಳಕೊಪ್ಪ ಪುರಸಭೆ, ಆನವಟ್ಟಿ ಪ.ಪಂ. ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರು ಮಾಡುವಂತೆ ಒತ್ತಾಯಿಸಿದರು.
ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 135 ಕೋಟಿ ಮೊತ್ತದ ಒಳಚರಂಡಿ ವ್ಯವಸ್ಥೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೮೫ಕೋಟಿ ಮೊತ್ತದ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಕೋರಲಾಯಿತು.
