ಶಿವಮೊಗ್ಗ :- ವಿದ್ಯಾರ್ಥಿಗಳು ಕೇಂದ್ರ, ರಾಜ್ಯ ಸರ್ಕಾರ ಮಂಡಿಸುವ ಬಜೆಟ್‌ನ ಮಹತ್ವ ಅರಿತುಕೊಳ್ಳುವುದು ಅವಶ್ಯಕ ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ. ದಿನೇಶ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಆಯೋಜಿಸಿದ್ದ ಕೇಂದ್ರ ಮತ್ತು ರಾಜ್ಯ ಬಜೆಟ್ ಒಂದು ವಿಶ್ಲೇಷಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ರಾಜ್ಯ, ಕೇಂದ್ರ ಸರ್ಕಾರ ಮಂಡಿಸುವ ಬಜೆಟ್‌ನಿಂದ ಆಗುವ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡಬೇಕು. ಇದರಿಂದ ಆದಾಯ ಹಾಗೂ ವೆಚ್ಚಗಳ ಬಗ್ಗೆ ತಿಳವಳಿಕೆ ಮೂಡುತ್ತದೆ. ಸಂಪನ್ಮೂಲ ಹಂಚಿಕೆಯ ಬಗ್ಗೆ ಅರಿವು ಹೆಚ್ಚಾಗುತ್ತದೆ ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜತೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ದೇಶೀಯ ವಿದ್ಯಾಶಾಲಾ ಸಮಿತಿಯು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಇತ್ತೀಚೆಗೆ ರಾಜ್ಯ, ಕೇಂದ್ರ ಸರ್ಕಾರ ಬಜೆಟ್ ಮಂಡಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬಜೆಟ್ ಮಹತ್ವ ತಿಳಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ ಎಂದರು.
ವಿದ್ಯಾರ್ಥಿಗಳು ವಿಶೇಷವಾಗಿ ಕೇಂದ್ರ, ರಾಜ್ಯ ಸರ್ಕಾರದ ಬಜೆಟ್‌ನಿಂದ ಆಗುವ ಪರಿಣಾಮಗಳ ಬಗ್ಗೆ ಹಾಗೂ ಉದ್ದೇಶಿತ ಯೋಜನೆಗಳ ಅನುಷ್ಠಾನದಿಂದ ಆಗುವ ಬಗ್ಗೆ ತಿಳಿದುಕೊಳ್ಳಬೇಕು. ದೇಶದ ಅಭಿವೃದ್ಧಿಯಲ್ಲಿ ಯುವ ಜನರ ಪಾತ್ರವು ಬಹಳ ಮುಖ್ಯ ಎಂದು ತಿಳಿಸಿದರು.
ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ನಿರ್ವಹಣಾ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀನಿವಾಸಮೂರ್ತಿ ಬಿ.ವಿ. ಮಾತನಾಡಿ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಪ್ರಮುಖಾಂಶಗಳ ಬಗ್ಗೆ ವಿವರಣೆ ನೀಡಿದರು. ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರಪ್ಪ ಡಿ.ಸಿ. ಮಾತನಾಡಿ ರಾಜ್ಯ ಬಜೆಟ್‌ನಲ್ಲಿನ ಬಗ್ಗೆ ವಿವರಣೆ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
