
ಶಿವಮೊಗ್ಗ :- ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಮತ್ತು ಸಂಬಂಧಪಟ್ಟವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯ ಮೇರೆಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅವರ ಅದೇಶದಂತೆ, ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ.

ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. ಪ್ರಸಕ್ತ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
