
ಶಿವಮೊಗ್ಗ :- ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ಬೆಂಗಳೂರಿನ ಕಿದ್ವಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಕ್ಯಾನ್ಸರ್ ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು ೩೫೦೦ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕ್ಯಾನ್ಸರ್ ಬಾದಿತ ಮಕ್ಕಳ ಲಾಲನೆ, ಪಾಲನೆ ದೃಷ್ಠಿಯಿಂದ ಪೋಷಕರಿಗೂ ವಸತಿ ಸೌಲಭ್ಯ ಕೊಡಿಸಲು ಗಮನಹರಿಸಲಾಗಿದೆ. ಆರಂಭಿಸಲು ಉದ್ದೇಶಿಸಲಾಗಿರುವ ಕ್ಯಾನ್ಸರ್ ಬಾದಿತ ಮಕ್ಕಳ ಶಾಲೆಗೆ ಆರಂಭದ ಹಂತದಲ್ಲಿ ಸುಮಾರು ೧೫೦೦ಮಕ್ಕಳು ದಾಖಲಾಗಬಹುದಾದ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ ಎಂದರು.
ಈಗಾಗಲೇ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ರಾಜ್ಯದ ಸುಮಾರು ೫೦ಸಾವಿರ ಶಿಕ್ಷಕರಿಗೆ ಕಲಿಕೆಯಲ್ಲಿ ಕೌಶಲ್ಯವನ್ನು ಬಳಸಿಕೊಂಡು ಬೋದಿಸಲು ಹಾಗೂ ದ್ವಿಭಾಷಾ ನೀತಿಗನುಗುಣವಾಗಿ ಬೋಧನಾ ಕ್ರಮವನ್ನು ಅಳವಡಿಸಿಕೊಳ್ಳಲು ಅನುಕೂಲವಾಗುವಂತೆ ತರಬೇತಿ ಕೊಡಿಸಲು ಕೋರಲಾಗಿದೆ. ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಈಗಾಗಲೇ ರಾಜ್ಯದ ೧೫ಸಾವಿರ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದಾರೆ ಎಂದರು.
ಅಲ್ಲದೇ ಇನ್ಫೋಸಿಸ್ ಸಂಸ್ಥೆಯ ವತಿಯಿಂದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಹಾಗೂ ಅತ್ಯಾಧುನಿಕ ಪಾಠೋಪಕರಣಗಳನ್ನು ಒದಗಿಸುವ ನಿಟ್ಟಿನಲ್ಲಿ ೨೦೦ಕೋಟಿ ರೂ.ಗಳ ಸಹಾಯಧನವನ್ನು ಪಡೆದು ಅಭಿವೃದ್ಧಿಪಡಿಸಲಾಗುತ್ತಿದೆ. ಅಲ್ಲದೇ ಇನ್ನಷ್ಟು ಅನುದಾನವನ್ನು ಸಿ.ಎಸ್.ಆರ್.ನಿಧಿಯಿಂದ ಪಡೆದು, ಜಿಲ್ಲೆಯ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆರ್. ಪ್ರಸನ್ನಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಪ್ರಸನ್ನಕುಮಾರ್, ಮಂಜುನಾಥ್, ಚಿನ್ನಪ್ಪ, ಶಿವಾನಂದ್ ಇನ್ನಿತರರಿದ್ದರು. ಮತ್ತಿತರರು ಉಪಸ್ಥಿತರಿದ್ದರು.
