ಮೈಸೂರು :- ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಈ ಹಿನ್ನಲೆ ನಿವೃತ್ತ ನ್ಯಾಯಮೂರ್ತಿಯೊಬ್ಬರು ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ. ಈ ಸಮಾವೇಶ ಕುರಿತು ಬಿಜೆಪಿ ಮುಖಂಡರು ಟೀಕಿಸುತ್ತಿದ್ದಾರೆ. ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ನಗರ ಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದು ತಿರುಗೇಟು ನೀಡಿದ ಮಖ್ಯಮಂತ್ರಿಗಳು ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ ಎಂದರು.